ಸುದ್ದಿ

ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

By admin

October 11, 2019

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್​ಸೆಟ್​ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್​ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.